Regarding implementation of reservation in outsourced recruitment of State Govt
ಕರ್ನಾಟಕದ ಸರ್ಕಾರದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ನಡೆಸಲಾಗುತ್ತದೆ. ಈ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ.
ಈ ಕುರಿತು ರಂದೀಪ್ ಡಿ. ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದ್ದಾರೆ.
ಈ ಸುತ್ತೋಲೆ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ ಮತ್ತು ದಿನಾಂಕ 19/5/2022ರ ಸುತ್ತೋಲೆ ಸಂಖ್ಯೆ: ಸಿಆಸುಇ 137 ಎಇಎಸ್ 2022 ಉಲ್ಲೇಖ ಮಾಡಲಾಗಿದೆ.
ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಭಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಸುತ್ತೋಲೆ ಹೇಳಿದೆ.
ದಿನಾಂಕ 21/12/2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.
ಮೀಸಲಾತಿ ನಿಯಮಗಳು
* ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
* ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
* ಟೆಂಡರ್ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ, ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಟೆಂಡರ್ ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದ್ದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
* ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
* ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.
ಅಲ್ಲದೇ ಸೂತ್ತೋಲೆಯಲ್ಲಿ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು/ ಸ್ವಾಯತ್ತ ಸಂಸ್ಥೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
No comments:
Post a Comment
If You Have any Doubts, let me Comment Here